ಏಕದಿನ ವಿಶ್ವಕಪ್​ನ ಮೊದಲ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಮೂಲಕ 106 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 3 ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡರು. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…- ಈ ಪಂದ್ಯದಲ್ಲಿ ಶತಕ ಪೂರೈಸುವುದರೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಶತಕ ಬಾರಿಸಿದ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ 49 ಶತಕಗಳನ್ನು ಬಾರಿಸಿದ್ದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಇದೀಗ 50ನೇ ಸೆಂಚುರಿ ಸಿಡಿಸುವ ಮೂಲಕ ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.ಈ ಮ್ಯಾಚ್ನಲ್ಲಿ ವಿರಾಟ್ ಕೊಹ್ಲಿ 80 ರನ್ ಪೂರೈಸುವುದರೊಂದಿಗೆ ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದರು. ಈ ದಾಖಲೆ ಕೂಡ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2003 ರ ವಿಶ್ವಕಪ್ನಲ್ಲಿ ಸಚಿನ್ 673 ರನ್ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಈ ಬಾರಿಯ ವಿಶ್ವಕಪ್ನಲ್ಲಿ 711 ರನ್ ಕಲೆಹಾಕುವ ಮೂಲಕ ಕಿಂಗ್ ಕೊಹ್ಲಿ ಈ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

– ಈ ಬಾರಿಯ ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ 3 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್​ ಆವೃತ್ತಿಯೊಂದರಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. 2003 ರ ವಿಶ್ವಕಪ್​ನಲ್ಲಿ ಸಚಿನ್ ತೆಂಡೂಲ್ಕರ್ 7 ಬಾರಿ 50+ ಸ್ಕೋರ್​ಗಳಿಸಿದ್ದರು. ಇದೀಗ 8ನೇ ಬಾರಿ 50+ ಸ್ಕೋರ್​ಗಳಿಸುವ ಮೂಲಕ ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 3 ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!